ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಡಾ.ಎಂ.ಬಿ.ಪಾಟೀಲ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.
ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್‌ನನ್ನು ಉದ್ಘಾಟಿಸಿದ ಸಚಿವರು, ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿನಿತ್ಯ ಸಾವಿರಾರು ಜನರು ಪ್ರಯಾಣಿಸುತ್ತಾರೆ. ಪ್ರಯಾಣಿಕರು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೪೮ ಲಕ್ಷ ಕಟ್ಟಡ ಕಾಮಗಾರಿ, ೧೨.೦೫ ಲಕ್ಷ ಅಡುಗೆ ಸಲಕರಣೆಗಳ ಮೊತ್ತ ಸೇರಿದಂತೆ ೬೦.೦೫ ಲಕ್ಷ ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗಿದೆ. ಇಂದಿರಾ ಕ್ಯಾಂಟಿನ್‌ನಲ್ಲಿ ಉತ್ತಮ ರುಚಿ-ಶುಚಿಯಾದ ಗುಣಮಟ್ಟದ ಆಹಾರ ಲಭ್ಯವಾಗಲಿದ್ದು, ಇದರಿಂದ ಬಡ ಜನರಿಗೆ ಅನುಕೂಲವಾಗಲಿದೆ. ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಯೋಜನೆ ಅತ್ಯಂತ ಜನಪ್ರಿಯ ಯೋಜನೆಯಾಗಿದ್ದು, ಜೂ.೨೮ರಂದು ಬಬಲೇಶ್ವರ ಹಾಗೂ ತಿಕೋಟಾ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಆಹಾರ ಗುಣಮಟ್ಟತೆಯನ್ನು ಪರೀಕ್ಷಿಸುವ ದೃಷ್ಟಿಯಿಂದ ಕಾಲಕಾಲಕ್ಕೆ ಅಧಿಕಾರಿಗಳು ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಕೆ.ಕೆ.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.